ಶಿವಮೊಗ್ಗ: ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಳೆದ ಎರಡು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಪಾರ್ಥೀವ ಶರೀರವನ್ನು ಇಂದು ರಾತ್ರಿ ವೇಳೆಗೆ ಶಿವಮೊಗ್ಗಕ್ಕೆ ತರುವ ಸಾಧ್ಯತೆ ಇದೆ.
ನಾಳೆ ಬೆಳಗ್ಗೆ 9:30 ಗಂಟೆಗೆ ಬಸವನಗುಡಿ ಮುಖ್ಯರಸ್ತೆಯಲ್ಲಿರುವ ಸ್ವಗೃಹದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಸಂಜೆ 4 ಗಂಟೆಗೆ ಹೊಸಳ್ಳಿಯ ಅವರ ತೋಟದಲ್ಲಿ ವೀರಶೈವ ಲಿಂಗಾಯಿತ ಸಮಾಜದ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗುವುದು ಎಂದು ಕುಟುಂಬಸ್ತರು ತಿಳಿಸಿದ್ದಾರೆ.
ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಸ್ಪರ್ಧಿಸಿ 1999ರಲ್ಲಿ ಹೆಚ್.ಎಂ.ಚಂದ್ರಶೇಖರಪ್ಪ ಗೆಲುವು ಸಾಧಿಸಿದ್ದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ, ನಗರಸಭೆ ಅಧ್ಯಕ್ಷರಾಗಿ, ವೀರಶೈವ-ಲಿಂಗಾಯತ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾಗಿ ಹಾಗೂ ಮಾಜಿ ಶಾಸಕರ ವೇದಿಕೆಯ ರಾಜ್ಯ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸಿದ್ದರು. ಅವರ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಸಂತಾಪ ಸೂಚಿಸಿದೆ.

