ಶಿವಮೊಗ್ಗ: ದ್ವೇಷ ಭಾಷಣಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸಿ.ಟಿ.ರವಿ ಅವರನ್ನು ತಕ್ಷಣವೇ ಎಂಎಲ್‍ಸಿ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಶಿವಮೊಗ್ಗ ಪೀಸ್ ಆರ್ಗನೈಸೇಷನ್ ಅಧ್ಯಕ್ಷ ರಿಯಾಜ್ ಅಹಮದ್ ಆಗ್ರಹಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕೆಲವು ಬಿಜೆಪಿ ನಾಯಕರಿಂದ ಸಾರ್ವಜನಿಕ ವೇದಿಕೆಗಳಲ್ಲಿ ಧರ್ಮಾಧಾರಿತ ಹಾಗೂ ಪ್ರಚೋದನಕಾರಿ ಹೇಳಿಕೆಗಳು ಹೊರಬರುತ್ತಿವೆ. ಇದು ದೇಶದ ಸಾಮಾಜಿಕ ಸಾಮರಸ್ಯಕ್ಕೆ ಗಂಭೀರ ಆತಂಕವನ್ನು ಉಂಟು ಮಾಡುತ್ತಿದ್ದು, ಮುಸ್ಲಿಂ ಸಮುದಾಯದ ವಿರುದ್ಧ ಮಾಡಿರುವ ಅಕ್ಷೇಪಾರ್ಹ ಹೇಳಿಕೆಗಳನ್ನು ಖಂಡಿಸುತ್ತೇನೆ ಎಂದಿದ್ದಾರೆ.
ಬಿಜೆಪಿ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಪ್ರತಾಪ್ ಸಿಂಹ ಮತ್ತು ಬಿವೈ. ವಿಜಯೇಂದ್ರ ಹಾಗೂ ಕೇಂದ್ರ ರಾಜಕೀಯ ನಾಯಕರ ಹೇಳಿಕೆಗಳು ಅನೇಕ ನಾಗರಿಕರಲ್ಲಿ ಮತ್ತು ಮುಸ್ಲಿಂ ಸಮುದಾಯದಲ್ಲಿ ನೋವು, ಆತಂಕ ಹಾಗೂ ಅಸಮಾಧಾನವನ್ನು ಉಂಟುಮಾಡಿವೆ. ಇಂತಹ ಹೇಳಿಕೆಗಳು ಸಮಾಜದಲ್ಲಿ ಪರಸ್ಪರ ವಿಶ್ವಾಸವನ್ನು ಕುಗ್ಗಿಸಿ, ಧರ್ಮಗಳ ನಡುವೆ ಅನಗತ್ಯ ಉದ್ವಿಗ್ನತೆ ಉಂಟು ಮಾಡುವ ಸಾಧ್ಯತೆ ಇದೆ. ಇಂತಹ ವಿವಾದಾತ್ಮಕ ಹೇಳಿಕೆಗಳ ಕುರಿತು ಸ್ಪಷ್ಟ ನಿಲುವು ಪ್ರಕಟಿಸಿ. ಸಿ.ಟಿ. ರವಿ ಅವರನ್ನು ಅವರ ಹುದ್ದೆಯಿಂದ ವಜಾಗೊಳಿಸಿ ಸೂಕ್ತ ಶಿಸ್ತು ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

