ಶಿವಮೊಗ್ಗ: ಶರಾವತಿ ಸಂತ್ರಸ್ತರ ಸಮಸ್ಯೆಗೆ ಸಂಬಂಧಿಸಿದಂತೆ ಅಂತಿಮ ಡ್ರಾಫ್ಟ್ ಸಿದ್ಧಪಡಿಸಲಾಗಿದ್ದು, ಶೀಘ್ರವೇ ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, “ಜನಪ್ರತಿನಿಧಿಗಳು ಮತ್ತು ಸಚಿವರ ಸಲಹೆಗಳನ್ನು ಪಡೆದು, ಜಿಲ್ಲಾಧಿಕಾರಿಗಳ ಮೂಲಕ ಅಂತಿಮ ಡ್ರಾಫ್ಟ್ ಸಿದ್ಧಪಡಿಸಲಾಗಿದೆ. ಡ್ರಾಫ್ಟ್‌ನಲ್ಲಿ ಕೆಲವು ಸಣ್ಣಪುಟ್ಟ ವ್ಯತ್ಯಾಸಗಳಿದ್ದು, ಅವುಗಳನ್ನು ಸರಿಪಡಿಸಲಾಗುತ್ತಿದೆ. ಒಮ್ಮೆ ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಅದನ್ನು ವಾಪಸ್ ಪಡೆಯಲು ಸಾಧ್ಯವಿಲ್ಲದ ಕಾರಣ, ನಾವು ಅತ್ಯಂತ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದ್ದೇವೆ,” ಎಂದರು. “ಕಾನೂನು ಸಲಹೆ ಬಂದ ತಕ್ಷಣವೇ ಅಡ್ವೋಕೇಟ್ ಜನರಲ್ ಅವರ ಮುಖಾಂತರ ಕೇಂದ್ರ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್‌ಗೆ ಅಂತಿಮ ವರದಿ ಸಲ್ಲಿಸಲಾಗುವುದು. ಯಾವುದೇ ಕಾರಣಕ್ಕೂ ಸಂತ್ರಸ್ತರಿಗೆ ತೊಂದರೆಯಾಗದಂತೆ ವೇಗವಾಗಿ ಕೆಲಸ ಮುಗಿಸುತ್ತೇವೆ. ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದಂತೆ ಕಂಪ್ಲೀಟ್ ಸರ್ವೆ ನಡೆಸಿ, ಸಂತ್ರಸ್ತರಿಗೆ ಪರಿಹಾರ ಒದಗಿಸಲು ಅಗತ್ಯ ಕ್ರಮ ವಹಿಸಲಾಗಿದೆ,” ಎಂದು ಹೇಳಿದರು.
”ಈ ಸಮಸ್ಯೆಯನ್ನು ಬಗೆಹರಿಸುವುದು ಬಂಗಾರಪ್ಪನವರು ಹಾಗೂ ಕಾಗೋಡು ತಿಮ್ಮಪ್ಪನವರ ಕನಸಾಗಿತ್ತು. ನಮ್ಮದೇ ಸರ್ಕಾರದ ಅವಧಿಯಲ್ಲಿ ಶರಾವತಿ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಿ, ಈ ಸಮಸ್ಯೆಗೆ ಸಂಪೂರ್ಣ ಮುಕ್ತಿ ನೀಡುತ್ತೇವೆ. ಪ್ರಸ್ತುತ ಡ್ರಾಫ್ಟ್ ವಾಪಸ್ ಬಂದಿದೆ ಎಂಬುದು ಸಂಪೂರ್ಣ ಸುಳ್ಳು. ಸಾರ್ವಜನಿಕರು ಇಂತಹ ಯಾವುದೇ ವದಂತಿಗಳಿಗೆ ಕಿವಿಗೊಡಬಾರದು,” ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

