60
ಶಿವಮೊಗ್ಗ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಮುಖ್ಯ ಆರೋಪಿ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಂಡಿರುವುದನ್ನು ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ತೀವ್ರಗೊಳಿಸಿದೆ.
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸರ್ಕಾರದ ವಿರುದ್ಧ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ. ಡಿಸಿ ಕಚೇರಿ ಮುಂಭಾಗ ಸಚಿವ ನಾಗೇಂದ್ರ ವಿರುದ್ಧ ಪೋಸ್ಟರ್‌ಗಳನ್ನು ಹಿಡಿದು ಕುಳಿತ ಬಿಜೆಪಿ ನಾಯಕರು, ಕಾಂಗ್ರೆಸ್ ಸರ್ಕಾರದ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಭ್ರಷ್ಟಾಚಾರದ ಆರೋಪ ಹೊತ್ತಿರುವ ನಾಗೇಂದ್ರ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ, ಸರ್ಕಾರದ ವಿರುದ್ಧ ಜೋರಾಗಿ ಧಿಕ್ಕಾರ ಕೂಗಿದರು. ಆರೋಪಿಗೆ ಸಚಿವ ಸ್ಥಾನ ನೀಡುವ ಮೂಲಕ ಕಾಂಗ್ರೆಸ್ ಭ್ರಷ್ಟಾಚಾರವನ್ನು ಬೆಂಬಲಿಸುತ್ತಿದೆ ಎಂದು ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.

