ಶಿವಮೊಗ್ಗ : ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ಲಾಂಟೇಶನ್ ವಾಚರ್ ಒಬ್ಬರ ಮೇಲೆ ಕರಡಿ ಆಕಸ್ಮಿಕವಾಗಿ ಭೀಕರ ದಾಳಿ ನಡೆಸಿರುವ ಘಟನೆ ಶಿಕಾರಿಪುರ ತಾಲೂಕಿನ ಶಿಡಿಗಿನಾಳು ಗ್ರಾಮದಲ್ಲಿ ನಡೆದಿದೆ.
ಅರಣ್ಯ ಇಲಾಖೆಯಲ್ಲಿ ಪ್ಲಾಂಟೇಶನ್ ವಾಚರ್ ಆಗಿ ಸೇವೆ ಸಲ್ಲಿಸುತ್ತಿರುವ ಕೆ.ಎನ್. ರಾಮು ಅವರು ಶಿಡಿಗಿನಾಳು ಭಾಗದಲ್ಲಿ ಕರ್ತವ್ಯದಲ್ಲಿದ್ದಾಗ ಈ ದುರಂತ ಸಂಭವಿಸಿದೆ. ದಿಢೀರನೆ ದಾಳಿ ಮಾಡಿದ ಕರಡಿಯಿಂದಾಗಿ ರಾಮು ಅವರು ತೀವ್ರವಾಗಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಒದಗಿಸಲಾಗಿದೆ.
ವಿಷಯ ತಿಳಿದ ತಕ್ಷಣವೇ ಸ್ಪಂದಿಸಿದ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಯೋಗಕ್ಷೇಮ ವಿಚಾರಿಸಿದರು. ಸಾಗರ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಹಮ್ಮದ್ ಫಯಾಜುದ್ದೀನ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ನಾಯ್ಕ್ ವಿ.ಎಸ್. ಹಾಗೂ ವಲಯ ಅರಣ್ಯಾಧಿಕಾರಿ ಪರಶುರಾಮ ಎಲ್. ಅವರು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳು ರಾಮು ಅವರಿಗೆ ಧೈರ್ಯ ತುಂಬಿದರು.
ಬಳಿಕ ಕರ್ತವ್ಯ ನಿರತ ವೈದ್ಯಾಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದ ಅಧಿಕಾರಿಗಳು, ಗಾಯಾಳಿಗೆ ಯಾವುದೇ ಕೊರತೆಯಾಗದಂತೆ ಸೂಕ್ತ ಹಾಗೂ ಅತ್ಯುತ್ತಮ ಚಿಕಿತ್ಸೆ ನೀಡುವಂತೆ ಮನವಿ ಮಾಡಿದರು. ಅಷ್ಟೇ ಅಲ್ಲದೆ, ಸಂಕಷ್ಟದಲ್ಲಿದ್ದ ಸಿಬ್ಬಂದಿಗೆ ತಕ್ಷಣದ ಆರ್ಥಿಕ ಸಹಾಯವನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳ ಈ ತಕ್ಷಣದ ಸ್ಪಂದನೆ, ನೆರವು ಮತ್ತು ಮಾನವೀಯ ಕಾಳಜಿಗೆ ಗಾಯಾಳುವಿನ ಕುಟುಂಬಸ್ಥರು ಹಾಗೂ ಅರಣ್ಯ ಸಿಬ್ಬಂದಿ ವರ್ಗದವರು ಹೃದಯಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ.

