ಶಿವಮೊಗ್ಗ: ನಗರದ ಬಡಾವಣೆಗಳಲ್ಲಿ ಮೂಲಸೌಕರ್ಯ ವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಗುಣಮಟ್ಟದ ಕಾಮಗಾರಿಗಳ ಮೂಲಕ ಸುಸ್ಥಿರ ಅಭಿವೃದ್ಧಿ ಸಾಧಿಸುವುದು ನಮ್ಮ ಗುರಿ ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್. ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದರು.
ಇಂದು ಬೆಳಿಗ್ಗೆ ನಗರದ ವಾರ್ಡ್ ಸಂಖ್ಯೆ 26ರ ಅಶೋಕನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ನೂತನ ರಸ್ತೆ ನಿರ್ಮಾಣ ಹಾಗೂ ಒಳಚರಂಡಿ ವ್ಯವಸ್ಥೆಯ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, “ಬಡಾವಣೆಯ ನಾಗರಿಕರಿಗೆ ದೈನಂದಿನ ಸಂಚಾರಕ್ಕೆ ಸುಸಜ್ಜಿತ ರಸ್ತೆ ಹಾಗೂ ಸ್ವಚ್ಛ ಪರಿಸರಕ್ಕಾಗಿ ಒಳಚರಂಡಿ ವ್ಯವಸ್ಥೆ ಅತ್ಯಗತ್ಯವಾಗಿದೆ. ಈ ಕಾಮಗಾರಿಗಳಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳದೆ ಅತ್ಯುನ್ನತ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಮತ್ತು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು” ಎಂದು ಪಾಲಿಕೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ನಗರ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀ ತಿಪ್ಪೇಶ್ ನಾಯ್ಕ, ವಾರ್ಡ್ ಅಧ್ಯಕ್ಷ ಶ್ರೀ ಸತೀಶ್, ಪ್ರಮುಖರಾದ ಶ್ರೀ ಕಾರ್ತಿಕ್, ಮಹಾನಗರ ಪಾಲಿಕೆಯ ಇಂಜಿನಿಯರ್‌ಗಳು, ಸ್ಥಳೀಯ ಮುಖಂಡರು ಹಾಗೂ ಬಡಾವಣೆಯ ಪ್ರಮುಖ ನಾಗರಿಕರು ಉಪಸ್ಥಿತರಿದ್ದರು.

