ಶೊವಮೊಗ್ಗ: ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗಳನ್ನು ಆಲಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಅ.12ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎನ್. ರಾಮಕೃಷ್ಣ ತಿಳಿಸಿದ್ದಾರೆ. ಅ.12 ರಂದು ಬೆಳಿಗ್ಗೆ 11.30ಕ್ಕೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಯಡವಾಲ, ಮುದವಾಲ ಮಾರ್ಗದಲ್ಲಿ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆ ನಡೆಸಿ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. ಬಳಿಕ ಹಾರನಹಳ್ಳಿ ಮೂಲಕ ಆಯನೂರಿಗೆ ತೆರಳಿ ಮಧ್ಯಾಹ್ನ 12 ಗಂಟೆಗೆ ನಡೆಯುವ ಬಹಿರಂಗ ಸಭೆಯಲ್ಲಿ ಭಾಗವಹಿಸಿ ರೈತರ ಸಮಸ್ಯೆಗಳನ್ನು ಆಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಬಳಿಕ ಭದ್ರಾವತಿಗೆ ತೆರಳಲಿರುವ ನಿಖಿಲ್ ಕುಮಾರಸ್ವಾಮಿ, ಅಂಡರ್ ಬ್ರಿಡ್ಜ್ ಬಳಿಯ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಬಳಿಕ ಬಿ.ಹೆಚ್. ರಸ್ತೆಯ ಮೂಲಕ ತೆರಳಿ ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ರಂಗಪ್ಪ ವೃತ್ತದ ಮೂಲಕ ತಾಲ್ಲೂಕು ಕಚೇರಿ ಬಳಿ ಆಯೋಜಿಸಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ರೈತರಿಗೆ ಬರ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯಾದ್ಯಂತ ಪ್ರವಾಸ ನಡೆಸಿ ರೈತರೊಂದಿಗೆ ಚರ್ಚಿಸುತ್ತಿದ್ದಾರೆ. ರೈತರ ಎಲ್ಲ ಸಾಲಗಳನ್ನು ಸರ್ಕಾರ ಮನ್ನಾ ಮಾಡಬೇಕು ಎಂಬ ಒತ್ತಾಯದೊಂದಿಗೆ ಅವರು ರಾಜ್ಯದಾದ್ಯಂತ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

